- ರಾಜ್ಯ
- 7:35 ಫೂರ್ವಾಹ್ನ
- ಮೇ 26, 2023
ಸಂಪುಟ ವಿಸ್ತರಣೆ: ಶನಿವಾರ ಪ್ರಮಾಣವಚನ ಫಿಕ್ಸ್, ಇನ್ನೂ ಅಂತಿಮವಾಗದ ಸಚಿವರ ಪಟ್ಟಿ!

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದು, ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಆದರೆ ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದೆ.
ಮೇ 27ರಂದು ಬೆಳಗ್ಗೆ 11.45ಕ್ಕೆ ನೂತನ ಸಚಿವರ ಪದಗ್ರಹಣ ನಡೆಯಲಿದೆ. ಒಟ್ಟು 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿ ಮೇರೆಗೆ ಶನಿವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಅವರು ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ ಒಂದೇ ಸಮುದಾಯದ ಮಧು, ಹರಿಪ್ರಸಾದ್ ಸೇರ್ಪಡೆಗೆ ಸಿದ್ದರಾಮಯ್ಯ ಅವರು ಅಸಮ್ಮತಿ ಸೂಚಿಸಿದ್ದಾರೆ. ಇದೇ ರೀತಿ 4-5 ಸಚಿವ ಆಕಾಂಕ್ಷಿಗಳ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ. ಇಂದು ಮತ್ತೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.