ಕರಾವಳಿಯಲ್ಲಿ ಭಾರಿ ಮಳೆ ಹಿನ್ನೆಲೆ ನಾಳೆ(ಜು.31) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯುಸಿವರೆಗೆ ರಜೆ ಘೋಷಣೆ.!
ಮಂಗಳೂರು: ಜಿಲ್ಲೆಯಾದ್ಯಂತ (ಕರಾವಳಿಯಲ್ಲಿ) ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಶಾಲಾ-ಕಾಲೇಜುಗಳಿಗೆ ನಾಳೆ ರಜೆ:
ಕರ್ನಾಟಕದ ಹಲವೆಡೆ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ(ಜು.31) ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜೊತೆಗೆ ಜುಲೈ 31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ತಹಶೀಲ್ದಾರ್ ಜಕ್ಕನಗೌಡರ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದು, ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್; ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಕೊಡಗು: ರಾಜ್ಯದ ಹಲವೆಡೆ ಗುಡ್ಡಕುಸಿತ ಪ್ರಕರಣಗಳು ನಡೆಯುತ್ತಿದ್ದಂತೆ ಎಚ್ಚೆತ್ತ ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್ ಘೋಷಿಸಿ, ಗುಡ್ಡ-ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.