ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಉಡುಪಿ, ಮೇ18: ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯಂತೆ ಮೇ 18ರಿಂದ 22ರವರೆಗೆ ಬಂಗಾಳಕೊಲ್ಲಿಯ ಸಮುದ್ರ ದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಸಮುದ್ರದಲ್ಲಿ ಹೆಚ್ಚಿನ ಗಾಳಿ (ಗಂಟೆಗೆ ಸುಮಾರು 45ರಿಂದ 55 ಕಿ.ಮಿ.ವೇಗ) ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.
ಅಲ್ಲದೇ ಮುಂದಿನ 5 ದಿನಗಳ ಕಾಲ ಹಳದಿ ಅಲರ್ಟ್ ಇರುವುದರಿಂದ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿರುವ ಮೀನುಗಾರರು ಕೂಡಲೇ ದಡ ಸೇರು ವಂತೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮೇ 19 ರಿಂದ 21ರವರೆಗಿನ ಅವಧಿಯಲ್ಲಿ 11 ರಿಂದ 20 ಸೆಂ.ಮೀ ವರೆಗೆ ಮಳೆ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಮೇ 20ಕ್ಕೆ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಮೇ 22ರ ತನಕ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ (ಪ್ರತಿ ಗಂಟೆಗೆ 55 ಕಿ.ಮೀ.) ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಸಮಯದಲ್ಲಿ ಕರ್ನಾಟಕದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.