ಮೀನೂಟ ಸವಿದು ದೇವರ ದರ್ಶನ ಮಾಡಿದ ಸಿ.ಟಿ ರವಿ ಫೋಟೋ ವೈರಲ್
ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನೂಟ ಸವಿದು ದೇವರ ದರ್ಶನ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.
ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ (Uttara Kannada) ಆಗಮಿಸಿದ್ದ ಸಿ.ಟಿ ರವಿ (CT Ravi) ಕಾರವಾರದ (Karwar) ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ.
ಈ ವೇಳೆ ದೇವಸ್ಥಾನದ ಬಾಗಿಲಲ್ಲೇ ಶಾಸಕ ಸುನಿಲ್ ನಾಯ್ಕ್ (Sunil Naik) ಹಾಗೂ ಕಮಿಟಿ ಸದಸ್ಯರಿಂದ ಸನ್ಮಾನ ಸಹ ಮಾಡಿದ್ದು, ಶಾಸಕರ ಜೊತೆ ಮೀನೂಟ ಸವಿಯುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿದ್ದರಾಮಯ್ಯ ಮಾಂಸ ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರು ಎಂದು ವಿವಾದ ಮಾಡಿದ ಬಿಜೆಪಿಗರು ಈಗೆಲ್ಲಿ ಹೋದರು ಎಂದು ಕಾಂಗ್ರಸಿಗರು ಪ್ರಶ್ನೆ ಮಾಡಿದ್ದು ಜಿಲ್ಲೆಯ ಸಾತ್ವಿಕ ಜನರು ಸಹ ಸಿಟಿ ರವಿ ವರ್ತನೆಗೆ ಕಿಡಿಕಾರಿದ್ದಾರೆ.