ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್
ದಾವಣಗೆರೆ: ಬಿಜೆಪಿ (BJP) ಮಾಜಿ ಸಚಿವ 77 ವರ್ಷದ ಹಿರಿಯ ನಾಯಕ ಎಸ್.ಎ ರವೀಂದ್ರನಾಥ್ (S.A Ravindranath) ಅನಾರೋಗ್ಯದ ಕಾರಣ ನೀಡಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ (B.S Yediyurappa) ಬಳಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ದಾವಣಗೆರೆಯ (Davanagere) ಶಿರಮಗೊಂಡನಹಳ್ಳಿಯ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಹಾಗೂ ವಯಸ್ಸಾದ ಕಾರಣ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ನನಗೆ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲೂ ಟಿಕೆಟ್ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರಕ್ಕೆ ಎಸ್.ಎ. ರವೀಂದ್ರನಾಥ್ ಅಭ್ಯರ್ಥಿ ಎಂದು ಹೇಳಿದ್ದರು. ನನಗೆ ಟಿಕೆಟ್ ಬೇಡ, ಹೊಸಬರಿಗೆ ಅವಕಾಶ ಕೊಡಿ ಎಂದು ರವೀಂದ್ರನಾಥ್ ಹೇಳಿದ್ದರು. ಯಡಿಯೂರಪ್ಪ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಹಿರಿಯ ಅಂದರೆ ನಾನೇ ಇರೋದು. ಹಾಗಾಗಿ ನಾನು ಕೂಡ ನಿವೃತ್ತಿ ಘೋಷಣ ಮಾಡಿಕೊಂಡಿದ್ದೇನೆ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಚುನಾವಣೆಯಿಂದ ಹಿಂದೆಸರಿದ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ
ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತೀರ್ಮಾನ ಮಾಡಿದ್ದು, ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಹಣ ಮಾಡಲು ರಾಜಕೀಯಕ್ಕೆ ಹೋಗಬೇಕು ಎಂಬ ಮಾತು ಸಾಮನ್ಯ. ಆದರೆ ಇದಕ್ಕೆ ತದ್ವಿರುದ್ದವಾಗಿ ನಡೆದುಕೊಂಡ ಜಾಲಾಡಿ ಶ್ರೀನಿವಾಸ ಶೆಟ್ಟಿ, ತಮ್ಮ ಜಮೀನು, ಆಸ್ತಿಯನ್ನೇ ಮಾರಾಟ ಮಾಡಿ ಜನಸೇವೆ ಮಾಡಿದ ಅಪರೂಪದ ರಾಜಕಾರಣಿಯಾಗಿದ್ದಾರೆ. ಸದ್ಯ ಚುನಾವಣೆಯಿಂದ ಹಿಂದೆಸರಿಯುವ ಮೂಲಕ ರಾಜಕಾರಣಕ್ಕೆ ನಿವೃತ್ತಿ ಘೋಷಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.