ಬಿರಿಯಾನಿ ತಿಂದು 17 ಜನ ಆಸ್ಪತ್ರೆಗೆ ದಾಖಲು..!
ಚಿಕ್ಕಮಗಳೂರು : ಹಳಸಿದ ಬಿರಿಯಾನಿ ತಿಂದ ಪರಿಣಾಮ 17 ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ,
ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ಔತಣಕೂಟ ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೇವಿಸಿದ ಸ್ವಲ್ಪ ಹೊತ್ತಿನ ಬಳಿಕ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡ ಹಿನ್ನೆಲೆ ಗ್ರಾಮಸ್ಥರು ಅಂಬುಲೆನ್ಸ್‌ನಲ್ಲಿ ಎಲ್ಲರನ್ನೂ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾನುವಾರ ತಯಾರಿಸಿದ್ದ ಮಾಂಸಾಹಾರ ಸೋಮವಾರ ವಿಷಪೂರಿತಗೊಂಡಿದ್ದು, ಅದನ್ನೇ ಗ್ರಾಮಸ್ಥರು ಸೇವಿಸಿದ್ದರಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಯಾರ ಪ್ರಾಣಕ್ಕೂ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಗ್ರಾಮಸ್ಥರ ಪೈಕಿ 8 ಪುರುಷರು ಹಾಗೂ 9 ಮಹಿಳೆಯರು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿದು ಕಡೂರು ಶಾಸಕ ಕೆಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಯೋಗಕ್ಷೇಮ ವಿಚಾರಿಸಿದ್ದಾರೆ.
ಚಿತ್ರದುರ್ಗ – ಅರೆಸ್ಟ್ ಆದ ಮೂರು ಗಂಟೆಯಲ್ಲಿ ಶಿವಮೂರ್ತಿ ಮುರುಘಾ ಶರಣರು ಬಿಡುಗಡೆ
ಚಿತ್ರದುರ್ಗ ನವೆಂಬರ್ 20: 13 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಬೇಲ್ ಪಡೆದು ಹೊರಗೆ ಬಂದಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿತರಾಗಿದ್ದರು. ಆದರೆ ಸಿನಿಮೀಯ ರೀತಿಯಲ್ಲಿ ನಡೆದ ಘಟನೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮೂರು ಗಂಟೆಯಲ್ಲಿ ಶರಣರು ಕಾರಾಗೃಹದಿಂದ ಹೊರಬಂದರು.
ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನಿನಲ್ಲಿ ನ.16ರಂದು ಬಿಡುಗಡೆಯಾಗಿದ್ದ ಶಿವಮೂರ್ತಿ ಶರಣರು ನಾಲ್ಕೇ ದಿನಗಳಲ್ಲಿ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದರು. ಶರಣರ ಬಂಧನಕ್ಕೆ ಸೆಷನ್ಸ್ ನ್ಯಾಯಾಲಯ ಹೊರಡಿಸಿದ ವಾರೆಂಟ್, ಬಂಧನ ಹಾಗೂ ಬಿಡುಗಡೆಯ ಬೆಳವಣಿಗೆಗಳು ಇಡೀ ದಿನ ಸಿನೀಮಿಯ ರೀತಿಯಲ್ಲಿ ನಡೆದವು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಬಿಕೆ ಕೋಮಲಾ ಅವರು ಇಂದು ಬೆಳಗ್ಗೆ ಮುರುಘಾ ಶ್ರೀಗಳ ವಿರುದ್ಧದ ಎರಡನೇ ಪೋಕ್ಸೊ ಪ್ರಕರಣದಲ್ಲಿ ಅವರಿಗೆ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. ಮೊದಲ ಪೋಕ್ಸೋ ಪ್ರಕರಣದಲ್ಲಿ 5 ದಿನಗಳ ಹಿಂದೆ ಹೈಕೋರ್ಟ್ ನಿಂದ ಜಾಮೀನು ಪಡೆದು ದಾವಣಗೆರೆಯ ವಿರಕ್ತ ಮಠದಲ್ಲಿ ತಂಗಿದ್ದ ಮುರುಘಾ ಶ್ರೀಗಳನ್ನು ಬಂಧಿಸಿದ್ದ ಪೊಲೀಸರು ಚಿತ್ರದುರ್ಗಕ್ಕೆ ಕರೆತಂದು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿತ್ತು.
ಇದನ್ನು ಪ್ರಶ್ನಿಸಿ ಮುರುಘಾ ಶ್ರೀಗಳ ಪರ ವಕೀಲರು ಸಂಜೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠದ ಮುಂದೆ ವಾದಿಸಿದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ವಿಚಾರಣಾ ಕೋರ್ಟ್‌ಗೆ ಮುರುಘಾ ಶ್ರೀಗಳ ವಿರುದ್ಧ ಎನ್‌ಬಿಡಬ್ಲ್ಯೂ ಕೋರಿ ಮೆಮೊ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಸೆಷನ್ಸ್ ಕೋರ್ಟ್ ಹೊರಡಿಸಿದ ವಾರೆಂಟ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶಿಸಿದ ಪ್ರತಿ ತಲುಪಿದ ಬಳಿಕ ಶರಣರನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.