ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ: ಬ್ರಿಟನ್ ಸಂಸದ
ಲಂಡನ್: ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದು ಬ್ರಿಟನ್ ಸಂಸದ ಲಾರ್ಡ್ ಕರನ್ ಬಿಲಿಮೋರಿಯಾ ಬಣ್ಣಿಸಿದ್ದಾರೆ. ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಗಳ ಜತೆ ಒಪ್ಪಂದಗಳನ್ನು ಮಾಡಿಕೊಳ್ಳಬೇಕಾದ ಅಗತ್ಯತೆ ಬಗ್ಗೆ ಸಂಸತ್ನಲ್ಲಿ ಪ್ರಸ್ತಾಪಿಸುವಾಗ ಅವರು ಭಾರತದ ಪ್ರಧಾನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗುಜರಾತ್ನ ರೈಲು ನಿಲ್ದಾಣದಲ್ಲಿ ಚಹಾ ಮಾರಾಟ ಮಾಡಿದ್ದ ಹುಡುಗ ಇಂದು ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಇಂದು ಭಾರತವು ಜಿ20 ಅಧ್ಯಕ್ಷತೆ ವಹಿಸಿಕೊಂಡಿದೆ. ಮುಂದಿನ 25 ವರ್ಷಗಳಲ್ಲಿ ಏನಾಗಬೇಕು ಎಂಬ ದೃಷ್ಟಿಕೋನವನ್ನು ಹೊಂದಿದೆ.
32 ಶತಕೋಟಿ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದ್ದಾರೆ. ಭಾರತವು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಮುಂದಿನ ದಶಕಗಳಲ್ಲಿ ಬ್ರಿಟನ್ ಅದರ ಹತ್ತಿರದ ಮತ್ತು ಅತ್ಯಂತ ವಿಶ್ವಾಸಾರ್ಹ ಸ್ನೇಹಿತ ಆಗಿರಬೇಕು ಎಂದು ಅವರು ಆಗ್ರಹಿಸಿದ್ದಾರೆ. ‘ಬ್ರಿಟನ್ ಮತ್ತು ಭಾರತದ ನಡುವಣ ಬಾಂಧವ್ಯದ ಮಹತ್ವ’ ಎಂಬ ವಿಷಯದ ಮೇಲೆ ನಡೆದ ಚರ್ಚೆಯಲ್ಲಿ ಅವರು ಮಾತನಾಡಿದ್ದಾರೆ.
ಬ್ರಿಟನ್ ಅನ್ನು ಹಿಂದಿಕ್ಕಿರುವ ಭಾರತವೀಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ಲಾರ್ಡ್ ಕರನ್ ಹೇಳಿದ್ದಾರೆ.
75 ವರ್ಷಗಳ ಪ್ರಜಾಪ್ರಭುತ್ವದೊಂದಿಗೆ ಭಾರತವೀಗ ಯುವ ದೇಶವಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಶೇ 8.7ರ ಬೆಳವಣಿಗೆ ದರ ದಾಖಲಿಸಿದೆ. ನವೀಕರಿಸಬಹುದಾದ ಇಂಧನ ಮತ್ತು ಸೌರ ಶಕ್ತಿಯ ಅತಿದೊಡ್ಡ ಉತ್ಪಾದಕ ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ಭಾರತ ಈಗ ಬ್ರಿಟನ್ನ 12ನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ. ಇದು ಸಾಲದು. ಇದನ್ನು ಇನ್ನೂ ಹೆಚ್ಚಿಸಬೇಕು ಎಂದೂ ಅವರು ಹೇಳಿದ್ದಾರೆ.
ಭಾರತದ ಜಿ20 ಅಧ್ಯಕ್ಷ ಸ್ಥಾನವು ನಿರ್ಣಾಯಕ ಸಮಯದಲ್ಲಿ ಬಂದಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವು ನಿರ್ಣಾಯಕವಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆಯ ಸ್ಥಾಪಕ, ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ವಾಬ್ ಶುಕ್ರವಾರ ಬಿಡುಗಡೆ ಮಾಡಿದ್ದ ವಿಶೇಷ ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.