ಭೀಕರ ಅಪಘಾತ : ಬ್ಯಾಂಕ್ ಉದ್ಯೋಗಿಗಳಿಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ಇಲ್ಲಿನ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಬೆಂ-ಮೈ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಶಂಕರ್, ಮಹದೇವು ಎಂದು ಗುರುತಿಸಲಾಗಿದೆ. ಮತ್ತೋರ್ವ ಕಿಶೋರ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂವರು ಕೆಲಸ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ, ಬಳಿಕ ಕ್ಯಾಮೆರಾ ಕಂಬಕ್ಕೂ ಡಿಕ್ಕಿ ಹೊಡೆದು, ಡಿವೈಡರ್ ಪಕ್ಕದ ರಸ್ತೆಗೆ ಮಗುಚಿಕೊಂಡಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಶಂಕರ್ ಹಾಗೂ ಮಹದೇವು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ಕಿಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು (Maddur Traffic Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.