ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲು!

ಹೈದರಾಬಾದ್: ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನಲ್ಲಿ ಸೋನಿಯಾ ಗಾಂಧಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಸಂಬಂಧವಿದೆ ಎಂದಿದ್ದ ಸ್ವಾಮಿ ಅವರ ಹೇಳಿಕೆಗಳ ವಿರುದ್ಧ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಮಲ್ಲು ರವಿ ಪೊಲೀಸರಿಗೆ ದೂರು ನೀಡಿದ್ದಾರೆ.
ರಾಜಶೇಖರ ರೆಡ್ಡಿ ಅವರು 2009ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಸ್ವಾಮಿ ಸುಳ್ಳು ಮಾಹಿತಿ ಹಬ್ಬಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ನಗರದ ಬೇಗಂಬಜಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (ಸಾರ್ವಜನಿಕ ದೌರ್ಜನ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.