ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಕ್ಯಾಪ್ಟನ್ ; ರೋಹಿತ್ ಶರ್ಮಾ ಅಬ್ಬರಕ್ಕೆ ಎಲ್ಲಾ ದಾಖಲೆಗಳು ಉಡೀಸ್..!
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್ಮ್ಯಾನ್ 69 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 121 ರನ್ ಬಾರಿಸಿದ್ದರು.
ಈ ಭರ್ಜರಿ ಶತಕದೊಂದಿಗೆ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗೆ ನೀಡಲಾಗಿದೆ….
1- ಅಫ್ಘಾನಿಸ್ತಾನ್ ವಿರುದ್ಧ ಶತಕ ಪೂರೈಸುವುದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ. ಹಿಟ್ಮ್ಯಾನ್ ಇದುವರೆಗೆ 5 ಟಿ20 ಶತಕಗಳನ್ನು ಸಿಡಿಸಿ ಈ ವಿಶ್ವ ದಾಖಲೆ ಬರೆದಿದ್ದಾರೆ.
2- ಈ ಪಂದ್ಯದಲ್ಲಿ 121 ರನ್ಗಳನ್ನು ಬಾರಿಸಿ ಅಬ್ಬರಿಸಿದ್ದ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಜಿ ನಾಯಕ ವಿರಾಟ್ ಕೊಹ್ಲಿ (1570) ಹೆಸರಿನಲ್ಲಿತ್ತು. ಇದೀಗ 1647 ರನ್ ಬಾರಿಸಿ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ.
3- ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ನಿಂದ ಬರೋಬ್ಬರಿ 8 ಸಿಕ್ಸ್ಗಳು ಮೂಡಿಬಂದಿತ್ತು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ನಾಯಕ ಎಂಬ ದಾಖಲೆ ಕೂಡ ಹಿಟ್ಮ್ಯಾನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಮೋರ್ಗನ್ (86 ಸಿಕ್ಸ್) ಹೆಸರಿನಲ್ಲಿತ್ತು. ಇದೀಗ 90 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ಇತಿಹಾಸ ಬರೆದಿದ್ದಾರೆ.
4- ಈ ಭರ್ಜರಿ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಭಾರತ ತಂಡದ ನಾಯಕ ಎಂಬ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಿದೆ. ಈ ಪಂದ್ಯದಲ್ಲಿ ಅಜೇಯ 121 ರನ್ ಬಾರಿಸುವ ಮೂಲಕ ಹಿಟ್ಮ್ಯಾನ್ ಈ ವಿಶೇಷ ಸಾಧನೆ ಮಾಡಿದ್ದಾರೆ.
5- ಈ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ನಾಯಕ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಒಂದು ಭರ್ಜರಿ ಶತಕ ಸಿಡಿಸಿ ಹಿಟ್ಮ್ಯಾನ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದು ವಿಶೇಷ.