ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2ಗೆ ಚಾಲನೆ ; ಜನವರಿ 28 ರ ವರೆಗೆ ನಡೆಯಲಿದೆ ಆಹಾರ ಉತ್ಸವ...!
ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಅದ್ದೂರಿ ವೇದಿಕೆಯಲ್ಲಿ ಚಾಲನೆ ದೊರೆತಿದೆ.
ಸ್ಪೀಕರ್ ಯು.ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು. “ಸ್ಟ್ರೀಟ್ ಫುಡ್ ಫಿಯೆಸ್ಟ” ಗೆ ಆರಂಭದಲ್ಲಿಯೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು ಜನವರಿ 28ರ ವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಗಿರಿಧರ್ ಶೆಟ್ಟಿ ಸಹಿತ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಬಿಜೆಪಿಯ ಕಾರ್ಪೊರೇಟರ್ ಗಳು, ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.
ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು : ಶಾಸಕ ಯಶ್ಪಾಲ್ ಸುವರ್ಣ
ಉಡುಪಿ : ಸಮಾಜದಲ್ಲಿ ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮ ಪಡುವುದರ ಜೊತೆಗೆ ಅವಳಿಗೆ ಉನ್ನತ ಶಿಕ್ಷಣ ನೀಡಬೇಕೆಂಬುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಗುರಿಯಾಗಿದ್ದು, ಇದನ್ನು ಸಕಾರಾತ್ಮಕಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಅತೀ ಹೆಚ್ಚು ಗೌರವ ಪಡೆಯುತ್ತಿರುವವರು ಮಹಿಳೆಯರು. ಹೆಣ್ಣುಮಕ್ಕಳಿಗೆ ಪ್ರಥಮವಾಗಿ ಪ್ರಾತಿನಿಧ್ಯ ನೀಡಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಪಡೆದುಕೊಳ್ಳಬೇಕು ಎಂದರು. ಹೆಣ್ಣುಮಕ್ಕಳು ರಾಜಕೀಯ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರುವುದರೊಂದಿಗೆ ತಾವು ಪುರುಷರಿಗಿಂತ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಹೆಣ್ಣು ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ್ದರೂ ಸಹ ಅವರು ಕ್ರಮಿಸುವ ಹಾದಿ ಇನ್ನು ಕೂಡ ಬಹಳಷ್ಟಿದೆ. ಶೇ. 24 ರಷ್ಟು ಹೆಣ್ಣು ಮಕ್ಕಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದು, ಶೇ.76 ರಷ್ಟು ಮಂದಿ ಇನ್ನು ಕೂಡ ಉನ್ನತ ಶಿಕ್ಷಣಕ್ಕೆ ತೆರೆದುಕೊಂಡಿಲ್ಲ. ಶೇ.13 ರಷ್ಟು ಮಂದಿ ಹೆಣ್ಣುಮಕ್ಕಳು ಮಾತ್ರ ಐಎಎಸ್ ಪಡೆದಿದ್ದು, ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗಬೇಕು ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳೇ ಹೆಣ್ಣು ಮಕ್ಕಳ ಸಾಧನೆಗೆ ಮೈಲುಗಲ್ಲು ಎಂದರು. ಸರಕಾರ ಜಾರಿಗೆ ತಂದಿರುವ ಯೋಜನೆಗಳು ಹೆಣ್ಣು ಮಕ್ಕಳ ಸಾಧನೆಗೆ ಪೂರಕವಾಗಬೇಕು. ಹೆಣ್ಣು ಮಕ್ಕಳು ತಮ್ಮ ವೈಯಕ್ತಿಕ ಸಮಸ್ಯೆಗಳ ಬಗ್ಗೆ ತಿಳಿಸಿದಾಗ ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸುವ ಕೆಲಸವಾಗಬೇಕು. ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಮಗು ಹೆಣ್ಣಾಗಲೀ ಅಥವಾ ಗಂಡಾಗಲಿ ಅದನ್ನು ಉಳಿಸುವಂತ ಕೆಲಸಮಾಡಬೇಕು ಎಂದರು.