Congress-AAP: ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಆಪ್ ಸ್ಪರ್ಧಿಸಿದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕೆ..!
ನವದೆಹಲಿ: ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ) ಸೀಟು ಹಂಚಿಕೆ ವಿಚಾರದಲ್ಲಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಆಪ್ ಸ್ಪರ್ಧಿಸಿದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕಿಳಿಯಲಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಡುವೆ ಮಾತುಕತೆ ಅಂತಿಮವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಎಎಪಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಪ್ರತಿ ಪಕ್ಷಗಳು ಸ್ಪರ್ಧಿಸುವ ನಿರ್ದಿಷ್ಟ ಸ್ಥಾನಗಳ ಬಗ್ಗೆ ಎರಡೂ ಕಡೆಯವರು ಸಹ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ದೆಹಲಿ, ಪಶ್ಚಿಮ ದೆಹಲಿ, ವಾಯುವ್ಯ ದೆಹಲಿ ಮತ್ತು ನವದೆಹಲಿ ಕ್ಷೇತ್ರದಿಂದ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಮತ್ತು ಕಾಂಗ್ರೆಸ್ ಚಾಂದಿನಿ ಚೌಕ್, ಪೂರ್ವ ದೆಹಲಿ ಮತ್ತು ಈಶಾನ್ಯ ದೆಹಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸೀಟು ಹಂಚಿಕೆ ಒಪ್ಪಂದವನ್ನು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆಯಷ್ಟೇ ಮೈತ್ರಿ ಕುರಿತು ಮಾತುಕತೆ ವಿಳಂಬವಾಗಿದೆ ಮತ್ತು ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಈ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದರು.