ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣ: ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್..!!

ಟೆಂಡರ್ ಕಾಮಗಾರಿಯಲ್ಲಿನ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರವಿಕುಮಾರ್ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಬೆಂಬಲಿಗರು ಏಕಾಏಕಿ ಹಲ್ಲೆ ನಡೆಸಿದ್ದರು.
ಹಲ್ಲೆ ಮತ್ತು ಬೆದರಿಕೆ ಹಿನ್ನೆಲೆಯಲ್ಲಿ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟೆಂಡರ್ ಏನು..? ತುಮಕೂರು ಜಿಲ್ಲೆಯ ಗುಬ್ಬಿ, ತಿಪಟೂರು ತಾಲೂಕುಗಳ ಗಣಿಬಾಧಿತ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಕಳೆದ ಸೆಪ್ಟೆಂಬರ್‌ನಲ್ಲಿ ಟೆಂಡರ್ ಕರೆಯಲಾಗಿತ್ತು. ರಾಯಸಂದ್ರ ರವಿಕುಮಾರ್ ಅವರಿಗೆ ಟೆಂಡರ್ ಆಗಿತ್ತು. ಕೊನೆಯ ಕ್ಷಣದಲ್ಲಿ ದಾಖಲೆ ಸಹಿತ ಟೆಂಡರ್ ಕರಾರು ಮಾಡಿಕೊಳ್ಳಲು ಹೋದಾಗ ನಿಮ್ಮ ಟೆಂಡರ್ ರದ್ದಾಗಿದೆ ಎಂದು ರಾಯಸಂದ್ರ ರವಿಕುಮಾರ್ ಅವರಿಗೆ ಹೇಳಿದ್ದಾರೆ ಎಂಬ ಆರೋಪವಿದೆ. ಇದೇ ಕಾರಣಕ್ಕೆ ಅವರು ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ ವಿರುದ್ಧ ತಡರಾತ್ರಿಯಲ್ಲಿ ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದರು.