ದಿಲ್ಲಿ ಅಬಕಾರಿ ನೀತಿ ಹಗರಣ; 6 ತಿಂಗಳ ಜೈಲು ವಾಸ ಬಳಿಕ ಸಂಜಯ್ ಸಿಂಗ್ ಗೆ ಕೊನೆಗೂ ಸುಪ್ರೀಂ ನಿಂದ ಜಾಮೀನು..!
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖಂಡ (AAP leader) ಸಂಜಯ್ ಸಿಂಗ್ (Sanjay Singh) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ (ಏಪ್ರಿಲ್ 1) ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡಿದರೆ ಯಾವುದೇ ಆಕ್ಷೇಪವಿಲ್ಲ ಎಂದು ಜಾರಿ ನಿರ್ದೇಶನಾಲಯ (Enforcement Directorate) ಹೇಳಿದೆ.
ಇದರೊಂದಿಗೆ ಸಂಜಯ್ ಸಿಂಗ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಹಿರಿಯ ಎಎಪಿ ನಾಯಕ ಎನಿಸಿಕೊಂಡಿದ್ದಾರೆ. ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಮಾಜಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ.ವರಲೆ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು ತನಿಖಾ ಸಂಸ್ಥೆಯ ಪರವಾಗಿ ನೀಡಿದ ರಿಯಾಯಿತಿಯನ್ನು ಪೂರ್ವ ನಿದರ್ಶನವಾಗಿ ಉಲ್ಲೇಖಿಸಲಾಗುವುದಿಲ್ಲ ಎಂದು ಹೇಳಿದೆ. ಆರು ತಿಂಗಳ ಕಾಲ ಜೈಲಿನಲ್ಲಿದ್ದ ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯ, ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸೂಚಿಸಿದೆ.
ಸಂಜಯ್ ಸಿಂಗ್ ಅವರಿಂದ ಯಾವುದೇ ಹಣವನ್ನು ವಶಪಡಿಸಿಕೊಳ್ಳಲಾಗಿಲ್ಲ ಮತ್ತು ಅವರು 2 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎನ್ನುವ ಆರೋಪವನ್ನು ವಿಚಾರಣೆ ವೇಳೆ ಪರೀಕ್ಷಿಸಬಹುದು ಎಂದು ಇ.ಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರಿಗೆ ಕೋರ್ಟ್ ತಿಳಿಸಿದೆ. ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‘ಸತ್ಯಮೇವ ಜಯತೆ’ ಎಂದು ಬರೆದುಕೊಂಡಿದ್ದಾರೆ.
2021-22ರಲ್ಲಿ ದೆಹಲಿಯಲ್ಲಿ ಜಾರಿಗೆ ತಂದ ಮದ್ಯ ನೀತಿ ಹಗರಣದ ಆದಾಯವನ್ನು ಸ್ವಾಧೀನಪಡಿಸಿಕೊಳ್ಳುವುದು, ಮರೆ ಮಾಚುವುದು ಮತ್ತು ಬಳಸುವುದು ಮೊದಲಾದ ಚಟಿವಟಿಕೆಗಳಲ್ಲಿ ಸಿಂಗ್ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿತ್ತು.
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಬಿಆರ್‌ಎಸ್ ಪಕ್ಷದ ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.