ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಯೆಲ್ಲೋ ಅಲರ್ಟ್:
ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.