ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಬಂಧನ
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.
ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು.
ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸೂರಜ್ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಸಂತ್ರಸ್ತನ ದೂರಿನಲ್ಲಿ ಏನಿತ್ತು?
ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ದರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ನಂಬರನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.