ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ...!
ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ (Thirthahalli) ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆನೇಕಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ – 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ
ಆನೇಕಲ್: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ (Under Construction Of School Building) ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಸೆಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ (labours) ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗಾಯಗೊಂಡ ಕಾರ್ಮಿಕರು ಕೋಲ್ಕತ್ತಾ ಮೂಲದವರು. ಒಟ್ಟು ನೂರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದೆವು. 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಈ ಸಮಯದಲ್ಲಿ ಭಾರ ಹೆಚ್ಚಾಗಿ ಹೆಚ್ಚಾಗಿ ಸಿಮೆಂಟ್ ಹಾಗೂ ಕಬ್ಬಿಣ ಕುಸಿದಿದೆ. ಸ್ಥಳದಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 5 ಮಂದಿ ಸ್ಥತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ತಿಳಿಸಿದ್ದಾರೆ.