ಹೆಚ್ ಡಿ ಕುಮಾರಸ್ವಾಮಿ ಮನವಿಗೆ ನೋ ಅಂದ್ರಾ ಅಮಿತ್ ಶಾ ; ಕೇವಲ 2 ಕ್ಷೇತ್ರಕ್ಕೆ ಟಿಕೆಟ್..!
ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್(BJP – JDS) ಮೈತ್ರಿ ಕಾಂಗ್ರೆಸ್(Congress) ಅನ್ನು ಸೋಲಿಸುವ ಮಾತನಾಡುತ್ತಿದ್ದರೂ ಕೂಡ, ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಹಗ್ಗ ಜಗ್ಗಾಟ ಮುಂದುವರಿದಿದೆ. ಎರಡು ಪಕ್ಷಗಳ ನಡುವೆ 25 ಮತ್ತು 3 ಸೀಟು ಹಂಚಿಕೆ ಒಪ್ಪಂದವಾಗಿದೆ ಎಂಬ ಬಗ್ಗೆ ಮಾಹಿತಿಯಿತ್ತು. ಆದರೆ, ಈಗ ಅದರಲ್ಲಿ ಬದಲಾವಣೆಯಾಗಿದೆ.
ಹೌದು.. ಬಿಜೆಪಿಯ ಕೇಂದ್ರ ನಾಯಕತ್ವದಿಂದ ಕೋಲಾರ ಕ್ಷೇತ್ರದ ಬಗ್ಗೆ ಖಚಿತ ಭರವಸೆ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ( HD Kumaraswamy) ವಿಫಲರಾಗಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಮನವಿ ಮಾಡಿದ್ದರು.
ಎಚ್ ಡಿ ಕುಮಾರಸ್ವಾಮಿ ಮನವಿಗೆ ನೋ ಎಂದ ಅಮಿತ್ ಶಾ! ಕೋಲಾರ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವ ಎಚ್ ಡಿ ಕುಮಾರಸ್ವಾಮಿ ಅವರ ಮನವಿಗೆ ಯಾವುದೇ ಭರವಸೆ ನೀಡಲು ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದಾರೆ. ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಸಲಹೆ ಪಡೆದು ಒಂದೆರೆಡು ದಿನದಲ್ಲಿ ವಾಪಸ್ ತಿಳಿಸುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 16 ರ ಶನಿವಾರ ನವದೆಹಲಿಗೆ ಬಂದಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಅಮಿತ್ ಶಾ ಭೇಟಿಯಾದ ಬಳಿಕ ಸಂಜೆ ತರಾತುರಿಯಲ್ಲಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ. ಆದರೆ, ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಳ್ಳಲು ಕೂಡ ಮಾಜಿ ಸಿಎಂ ನಿರಾಕರಿಸಿದ್ದಾರೆ.
ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಭಾಗವಾಗಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಹಂಚಿಕೆ ಮಾಡಿರುವ ಜೆಡಿಎಸ್‌ಗೆ ಕೋಲಾರ ಕ್ಷೇತ್ರವನ್ನೂ ಬಿಟ್ಟುಕೊಡಬೇಕು ಎಂದು ಎಚ್ ಡಿ ಕುಮಾರಸ್ವಾಮಿ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಕೋಲಾರದಲ್ಲಿ ಪಕ್ಷ ಸೀಟು ಪಡೆಯುವಲ್ಲಿ ಯಶಸ್ವಿಯಾದರೆ ಮುಳಬಾಗಲು ಶಾಸಕ ಸಮೃದ್ಧಿ ಮಂಜುನಾಥ್ ಅಥವಾ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.
ಆದರೆ, ಪ್ರಸ್ತುತ ಲೋಕಸಭೆಯಲ್ಲಿ ಪಕ್ಷದ ಎಸ್ ಮುನಿಸ್ವಾಮಿ ಪ್ರತಿನಿಧಿಸುತ್ತಿರುವ ಕ್ಷೇತ್ರ ಬಿಜೆಪಿಯ ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರವನ್ನು ಕೈ ಬಿಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರು ಕೇಂದ್ರ ನಾಯಕರನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಳೆದ ಬಾರಿ ಬಿಜೆಪಿ ತನ್ನ ವಶ ಮಾಡಿಕೊಂಡಿದೆ. ಇದನ್ನು ಕಳೆದುಕೊಳ್ಳಲು ಬಿಜೆಪಿ ಸಿದ್ಧವಿಲ್ಲ.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಮೂರು ಕ್ಷೇತ್ರಗಳನ್ನು ಪಡೆದುಕೊಂಡಿದೆ ಎಂಬುದು ರಾಜ್ಯ ಬಿಜೆಪಿ ನಾಯಕರ ವಾದ.
ಇನ್ನು, ಎಚ್ ಡಿ ಕುಮಾರಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಾ, ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ಬಿಜೆಪಿಯ ಸೀಟು ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಮೈತ್ರಿ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಜೆಪಿ ಕರ್ನಾಟಕದ 20 ಕ್ಷೇತ್ರಗಳಿಗೆ ಏಕಪಕ್ಷೀಯವಾಗಿ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ಹೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.