ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿಕೆ ಶಿವಕುಮಾರ್ ಗೆ 50 ಸಾವಿರ ರೂಪಾಯಿ ದಂಡ ವಿಧಿಸಿದ ಬಿಬಿಎಂಪಿ!
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಬಿಎಂಪಿ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಅನಧಿಕೃತ ಬ್ಯಾನರ್ ಅಳವಡಿಸಿದ್ದಕ್ಕಾಗಿ ಡಿಕೆ ಶಿವಕುಮಾರ್ ಗೆ ಬಿಬಿಎಂಪಿ ದಂಡವಿಧಿಸಿದೆ. ಹೈಕೋರ್ಟ್ ಆದೇಶದ ಪ್ರಕಾರ, ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್ ಗಳಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಬಿಬಿಎಂಪಿ ಮುಂದುವರೆಸಿದ್ದು, ಕೆಪಿಸಿಸಿಯಿಂದ ಅನಧಿಕೃತ ಬ್ಯಾನರ್ ಅಳವಡಿಸಿದ್ದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ.
ಮಾಜಿ ಸಿಎಂ ದಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯ ಅಂಗವಾಗಿ ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬ್ಯಾನರ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ರಾಜ್ಯದ ಎಲ್ಲಾ ಪಧಾಧಿಕಾರಿಗಳ ಭಾವಚಿತ್ರವಿತ್ತು.
ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸುವ ವಿಚಾರವಾಗಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿತ್ತು. ಈ ಬಳಿಕವೂ ಸರ್ಕಾರದ ನಿಷ್ಕ್ರಿಯತೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ಸರ್ಕಾರಕ್ಕೆ ಛೀಮಾರಿ ಹಾಕಿತ್ತು.
ನಿಯಮ ಉಲ್ಲಂಘನೆ ಮಾಡುವವರಿಗೆ 50 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈಗ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಅಳವಡಿಸಿದ್ದ ಬ್ಯಾನರ್ಗೇ ದಂಡ ವಿಧಿಸಲಾಗಿದೆ.
ಎಚ್ಚರಿಕೆ ಕೊಟ್ಟವರಿಗೆ ದಂಡ
ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್ಗಳನ್ನು ಪ್ರದರ್ಶಿಸಲು ಅವಕಾಶ ನೀಡುವುದಿಲ್ಲ. ನಗರವನ್ನು ವಿರೂಪಗೊಳಿಸಲು ಮುಂದಾಗುವ ಯಾರೇ ಆದಲ್ಲಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ಮಹಾನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ಪ್ರದರ್ಶಿಸುವವರಿಗೆ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಇನ್ನು ಮುಂದೆ ಯಾವುದೇ ಪಕ್ಷ, ಸಂಘಟನೆ ಹಾಗೂ ಖಾಸಗಿ ಕಂಪನಿಗಳು ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ಹಾಕಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದ್ದರು.