ಚಿಕ್ಕಬಳ್ಳಾಪುರ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೇತರಿಸಲು ಶಾಸಕ ಪ್ರದೀಪ್ ಈಶ್ವರ್ ಅವರಿಂದ 'ಸೂಪರ್ 60' ಎನ್ನುವ ವಿನೂತನ ಪ್ರಯೋಗ!!
ಬೆಂಗಳೂರು: ಚಿಕ್ಕಬಳ್ಳಾಪುರ ಭಾಗದಲ್ಲಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಫಲಿತಾಂಶ ಕುಸಿಯುವುದನ್ನು ಗಂಭೀರವಾಗಿ ಪರಿಗಣಿಸಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಈಗ ‘ಸೂಪರ್ 60’ ಎನ್ನುವ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ‘ಸೂಪರ್ 60’ ಯೋಜನೆಯಲ್ಲಿ ಪ್ರತಿಭಾನ್ವಿತ 120 ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮ ನೀಟ್ ಅಕಾಡೆಮಿಯಲ್ಲಿಯೇ ಮೂರು ತಿಂಗಳ ತರಬೇತಿ ನೀಡಲು ಶಾಸಕರು ಸಿದ್ಧತೆ ನಡೆಸಿದ್ದಾರೆ.
ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರದೀಪ್, ಕ್ಷೇತ್ರದಲ್ಲಿ ಫಲಿತಾಂಶ ಕಡಿಮೆಯಾಗಲು ಕಾರಣವೇನು ಎನ್ನುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಮಾಹಿತಿಯ ಆಧಾರದಲ್ಲಿಯೇ, ‘ಸೂಪರ್ 60’ ಎನ್ನುವ ಯೋಜನೆಯನ್ನು ಆರಂಭಿಸಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ 60 ವಿದ್ಯಾರ್ಥಿ ಹಾಗೂ 60 ವಿದ್ಯಾರ್ಥಿನಿಯರಿಗೆ ಬೆಂಗಳೂರಿನಲ್ಲಿ ವಿಶೇಷ ತರಬೇತಿ ನೀಡಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ 27 ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಸಿದ್ದಾರೆ.
ಈ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ 120 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರಿನಲ್ಲಿಅವರಿಗೆ ಮುಂದಿನ ಮೂರು ತಿಂಗಳು ತರಬೇತಿ ನೀಡಲಿದ್ದಾರೆ. ತಜ್ಞ ಶಿಕ್ಷಕರಿಂದ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಅತ್ಯುತ್ತಮ ಫಲಿತಾಂಶವನ್ನು ಈ ವಿದ್ಯಾರ್ಥಿಗಳಿಗೆ ಸಿಗುವಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದಾರೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಯಲ್ಲಿವಿದ್ಯಾಭ್ಯಾಸ ಮಾಡುತ್ತಿರುವ ಬಡ, ಅನಾಥ, ಸಿಂಗಲ್ ಪೇರೆಂಟ್ ಮಕ್ಕಳನ್ನು ಈ ಯೋಜನೆಯಲ್ಲಿಆಯ್ಕೆ ಮಾಡ-ಲಾಗು-ತ್ತದೆ.
ಯೋಜನೆಗೆ ಸರಕಾರದ ಯಾವುದೇ ಅನುದಾನವನ್ನು ಪಡೆಯದೇ, ಪ್ರದೀಪ್ ಈಶ್ವರ್ ಅವರು ತಮ್ಮ ಸ್ವಂತ ಖರ್ಚಿಯಲ್ಲಿಈ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸುವುದಕ್ಕೆ ತೀರ್ಮಾನಿಸಿದ್ದಾರೆ.