Dengue: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ; ಗ್ರಾ.ಪಂ.ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ
Dengue: ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ನಿರ್ದೇಶಿಸಿದ್ದಾರೆ.
ಕುಡಿಯುವ ನೀರು ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಡೆಂಘಿ (Dengue) ಹರಡುವಿಕೆ ತಡೆ ಮತ್ತು ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ.
ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು; ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು, ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
ಕೊಳವೆ ಬಾವಿಗಳು ಹಾಗೂ ನೀರು ಸರಬರಾಜು ಪೈಪುಗಳು ಒಳಚರಂಡಿಯಿಂದ ದೂರದಲ್ಲಿರುವಂತೆ ಕ್ರಮವಹಿಸುವುದು ಮತ್ತು ಪೈಪುಗಳಲ್ಲಿ ನೀರು ಸೋರಿಕೆಯಾಗದಂತೆ ನಿಗಾವಹಿಸಬೇಕು; ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಹಾಗೂ ತೊಟ್ಟಿಯನ್ನು ಸ್ವಚ್ಛಗೊಳಿಸಬೇಕು; ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು; ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮ ವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟೆಚ್ಚರ ನೀಡಿದ್ದಾರೆ.
ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು; ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಅರಿವು ಮೂಡಿಸಬೇಕು ಎಂದು ಸೂಚಿಸಿದ್ದಾರೆ.
ಗ್ರಾಮ ಮಟ್ಟದಲ್ಲಿರುವ ‘ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ’ಗಳನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಪಂಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸಚಿವರು (Priyank Kharge) ಸೂಚಿಸಿದ್ದಾರೆ.