ಕರಾವಳಿ ಹಾಗೂ ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಐದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರು, ಹಾರಂಗಿ, ನಾಪೋಕ್ಲು, ಸರಗೂರು, ಧರ್ಮಸ್ಥಳ, ಮಾಗಡಿ, ಸುತ್ತೂರಿನಲ್ಲಿ ಮಳೆಯಾಗಿದೆ. ರಾಯಚೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಶಿವಮೊಗ್ಗ,ಚಿತ್ರದುರ್ಗ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ, ಸೋಮವಾರ ಬೆಳಗ್ಗೆಯೂ ಅಲ್ಲಲ್ಲಿ ಮಳೆಯಾಗಿದ್ದು ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಇಂದೂ ಕೂಡ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.