ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಗೆ ಎಷ್ಟು ಸೀಟು ಖಚಿತ? ಇಲ್ಲಿದೆ ಸಮೀಕ್ಷೆ ವರದಿ
ಬೆಂಗಳೂರು, ಜನವರಿ 24: ಲೋಕಸಭೆ ಚುನಾವಣೆ ತಯಾರಿ ನಡೆಯುತ್ತಿದೆ. ವಿವಿಧ ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆಯನ್ನು ಮಾಡುತ್ತಿವೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದಕ್ಷಿಣ ಭಾರತದ ಎರಡು ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಸಮೀಕ್ಷೆಯೊಂದು ನಡೆದಿದ್ದು, ವರದಿ ಬಿಡುಗಡೆಯಾಗಿದೆ.
2024ರ ಲೋಕಸಭೆ ಚುನಾವಣೆ ಕುರಿತು Lok Poll ವಿವಿಧ ರಾಜ್ಯಗಳಲ್ಲಿ ಸಮೀಕ್ಷೆಯನ್ನು ನಡೆಸುತ್ತಿದೆ. ಕರ್ನಾಟಕದಲ್ಲಿಯೂ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ವರದಿ ಬಿಜೆಪಿ ನಾಯಕರ ಲೆಕ್ಕಾಚಾರವನ್ನು ತಲೆಕೆಳಗಾಗಿ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಪರಿಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿದೆ ಕಾಂಗ್ರೆಸ್. ಲೋಕಸಭೆ ಚುನಾವಣೆಯಲ್ಲಿಯೂ ಪಕ್ಷ ರಾಜ್ಯದಲ್ಲಿ ಎರಡಂಕಿಯ ಸೀಟುಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಯಾವ ಪಕ್ಷಕ್ಕೆ ಎಷ್ಟು ಸೀಟು?; 2024ರ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ. ಮತ್ತೊಂದು ಕಡೆ ಕಾಂಗ್ರೆಸ್ ಎದುರಿಸಲು ಬಿಜೆಪಿ ಮತ್ತು ಎಚ್. ಡಿ. ದೇವೇಗೌಡ ನೇತೃತ್ವದ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.
Lok Poll ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ 12-14 ಸ್ಥಾನಗಳಲ್ಲಿ ಜಯಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಕ್ಷವಾಗಲಿದೆ ಎಂದು ಅಂದಾಜಿಸಿದೆ.
ಬಿಜೆಪಿ 10-12 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ 1-2 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಎಷ್ಟು ಸೀಟುಗಳು ಜೆಡಿಎಸ್‌ಗೆ ಸಿಗಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
#LoksabhaElections2024 | Ground Report | #Karnataka
— Lok Poll (@LokPoll) January 22, 2024
Total Seat 28
▪️INC 12 - 14
▪️BJP 10 - 12
▪️JDS 1 - 2#LokSabha #Elections2024
ಕರ್ನಾಟಕದಲ್ಲಿ ಕಾಂಗ್ರೆಸ್ 1ಕ್ಕಿಂತ ಎಷ್ಟು ಸ್ಥಾನ ಹೆಚ್ಚಿಗೆ ಪಡೆದರೂ ಅದೂ ಪಕ್ಷಕ್ಕೆ ಪ್ಲಸ್ ಪಾಯಿಂಟ್. ಕಾರಣ 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ರಾಜ್ಯದ 28 ಕ್ಷೇತ್ರಗಳ ಪೈಕಿ ಗೆದ್ದಿರುವುದು ಕೇವಲ 1 ಸ್ಥಾನ (ಬೆಂಗಳೂರು ಗ್ರಾಮಾಂತರ). ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು.
ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿತ್ತು. ಆದರೆ ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದೆ. 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಹೈಕಮಾಂಡ್ ನಾಯಕರು ಟಾರ್ಗೆಟ್ ನೀಡಿದ್ದಾರೆ. 2109ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಜೆಡಿಎಸ್ ಪಕ್ಷ ರಾಜ್ಯದಲ್ಲಿ 1 ಸೀಟು (ಹಾಸನ) ಮಾತ್ರ ಗೆದ್ದಿತ್ತು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ತುಮಕೂರು ಕ್ಷೇತ್ರದಲ್ಲಿ, ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲು ಕಂಡಿದ್ದರು. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗಲಿದೆಯೇ? ಅಥವ ಜೆಡಿಎಸ್‌ಗೆ ಪಾಲಾಗಲಿದೆಯೇ? ಎಂದು ಕಾದು ನೋಡಬೇಕಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಸದ್ಯ ರಾಜ್ಯಾಧ್ಯಕ್ಷರು. ಲೋಕಸಭೆ ಚುನಾವಣೆಯಲ್ಲಿ 20 + ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಅವರು ಪಣ ತೊಟ್ಟಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಸದ್ಯದ ಲೆಕ್ಕಾಚಾರದಂತೆ ಮಂಡ್ಯ, ಹಾಸನ ಕ್ಷೇತ್ರವನ್ನು ಮಾತ್ರ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗುತ್ತದೆ. ಹಾಲಿ ಚನ್ನಪಟ್ಟಣ ಶಾಸಕರಾಗಿರುವ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಕರ್ನಾಟಕದ ಪಕ್ಕದ ತೆಲಂಗಾಣ ರಾಜ್ಯದಲ್ಲಿಯೂ ಕಾಂಗ್ರೆಸ್ ಅಧಿಕಾರದಲ್ಲಿದೆ. Lok Poll ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 8-10, ಬಿಆರ್‌ಎಸ್ 3-4, ಬಿಜೆಪಿ 1-2, ಇತರರು 1 ಸ್ಥಾನಗಳಿಸುವ ಸಾಧ್ಯತೆ ಇದೆ.