ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ; ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ!
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಶುಕ್ರವಾರ ಘೋಷಿಸಿದ್ದಾರೆ.
ಇಂದು ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ. ಹಾಸನದಿಂದ ಪ್ರಜ್ವಲ್ ರೇವಣ್ಣ ಅವರೇ ಮತ್ತೆ ಸ್ಪರ್ಧೆ ಮಾಡಲಿದ್ದಾರೆ ಎಂದರು.
ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ನನಗೆ ಇನ್ನೂ ಎರಡೂವರೆ ವರ್ಷ ರಾಜ್ಯಸಭೆ ಅಧಿಕಾರ ಇದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಯಾವುದೇ ಸಂಶಯ, ಗೊಂದಲಬೇಡ ಎಂದರು.
ಜೆಡಿಎಸ್ – ಬಿಜೆಪಿ ಸೀಟು ಹಂಚಿಕೆ ಸಂಬಂಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಅಮಿತ್ ಶಾ ಅವರೊಂದಿಗೆ ಮೊದಲನೇ ಹಂತದ ಮಾತುಕತೆ ನಡೆಸಿದ್ದಾರೆ. ಐದು ರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ರಾಜಕೀಯ ದ್ವೇಷದಿಂದ ಡಿಕೆಶಿ ವಿರುದ್ಧ ಬಿಜೆಪಿ ತನಿಖೆಗೆ ಆದೇಶಿಸಿತ್ತು: ಸಚಿವ ಎಂಬಿ ಪಾಟೀಲ್ ಆರೋಪ
ವಿಜಯಪುರ: ಹಿಂದಿನ ಬಿಜೆಪಿ ಸರ್ಕಾರ ಕೇವಲ ರಾಜಕೀಯ ದ್ವೇಷ ಸಾಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿತ್ತು ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಗುರುವಾರ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರನ್ನು ಗುರಿಯಾಗಿಸಲು ಉದ್ದೇಶಪೂರ್ವಕವಾಗಿ ಸಿಬಿಐ ತನಿಖೆಗೆ ಆದೇಶಿಸಿತ್ತು. ಆದರೆ, ನಮ್ಮ ಸರ್ಕಾರ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಬಿಜೆಪಿಯ ಆದೇಶವನ್ನು ಹಿಂಪಡೆಯಲು ನಿರ್ಧರಿಸಿದೆ. ಕಾನೂನು ಪ್ರಕಾರವೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಪ್ರತಿಪಕ್ಷಗಳನ್ನು ಗುರಿಯಾಗಿಸಲು ಬಿಜೆಪಿ ಇಡಿ, ಐಟಿ ಮತ್ತು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದ ಅವರು, ಇಡಿ, ಐಟಿ ಅಥವಾ ಸಿಬಿಐ ಬಿಜೆಪಿ ನಾಯಕರ ವಿರುದ್ಧವೇಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.
ಬಿಜೆಪಿಯವರ ವಿರುದ್ಧ ಯಾಕೆ ದಾಳಿ ಮಾಡಿಲ್ಲ? ಅವರೆಲ್ಲರೂ ಸತ್ಯ ಹರಿಶ್ಚಂದ್ರರಾ? ಇಡೀ ದೇಶದಲ್ಲಿ ಬಿಜೆಪಿಯ ಒಬ್ಬ ಮುಖಂಡನ ಮೇಲಾದರೂ ಐಟಿ ರೇಡ್ ಮಾಡ್ತಾರಾ? ಇಡಿ, ಸಿಬಿಐ ಕೇಸ್ ಹಾಕ್ತಾರಾ? ಎಂದು ಖಾರವಾಗಿ ಪ್ರಶ್ನಿಸಿದರು.
ನಿಗಮ ಮಂಡಳಿ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿ, ಮೊದಲ ಹಂತದಲ್ಲಿ ಶಾಸಕರಿಗೆ, ಕೆಲ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುತ್ತದೆ. ಈಗಾಗಲೇ ಸಭೆ ಕೂಡ ನಡೆದಿದೆ. ಲೋಕಸಭೆ ಚುನಾವಣೆ ಬಳಿಕ ಕಾರ್ಯಕರ್ತರಿಗೆ, ಸದಸ್ಯರಿಗೆ ನೀಡುವ ಪ್ರಕ್ರಿಯೆ ನಡೆದಿದೆ. ಅದು ಸಿಎಂ, ಕೆಪಿಸಿಸಿ ಅಧ್ಯಕ್ಷರಿಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ ಅವರಿಗೆ ಗೊತ್ತಿದೆ ಎಂದು ಹೇಳಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಕಾಂಗ್ರೆಸ್‌ನ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಸಿಎಂಗೆ ಪತ್ರ ಬರೆದಿರುವ ವಿಚಾರ ಕುರಿತು ಮಾತನಾಡಿ, ಕೆಲವು ಬೆಳವಣಿಗೆಗಳಿಂದ ಮಾಜಿ ಸಚಿವರಿಗೆ ನೋವಾಗಿರಬಹುದು. ಬಿ.ಆರ್.ಪಾಟೀಲ್ ಅವರೊಂದಿಗೂ ಸಿಎಂ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.