ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಇಂಫಾಲದಲ್ಲಿ ಜಿಲ್ಲಾಧಿಕಾರಿ ಕಚೇರಿ ಧ್ವಂಸ -ಎರಡು ವಾಹನಗಳಿಗೆ ಬೆಂಕಿ!
ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದು, ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಗುರುವಾರ ಮುಂಜಾನೆ ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯಕ್ಕೆ ಸೇರಿದ 17 ವರ್ಷದ ಬಾಲಕಿ ಮತ್ತು 20 ವರ್ಷದ ಯುವಕನ ಮೃತದೇಹಗಳ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಮಂಗಳವಾರದಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.
ಕಳೆದ ರಾತ್ರಿ, ಪ್ರತಿಭಟನಾಕಾರರು ಉರಿಪೋಕ್, ಯೈಸ್ಕುಲ್, ಸಗೋಲ್‌ಬಂಡ್ ಮತ್ತು ತೇರಾ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಗೆ ಇಳಿದಿದ್ದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಯತ್ನಿಸಿದ ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು, ಬಂಡೆಗಳನ್ನು ರಸ್ತೆಗೆ ಉರುಳಿಸಿದರು ಮತ್ತು ಕಬ್ಬಿಣದ ಪೈಪ್‌ಗಳನ್ನು ರಸ್ತೆಗೆ ಅಡ್ಡಲಾಗಿ ಹಾಕಿದ್ದರು ಎಂದು ಅವರು ಹೇಳಿದರು.
ಗುಂಪೊಂದು ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ. ಸದ್ಯ ಸಿಆರ್‌ಪಿಎಫ್ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 65 ಮಂದಿ ಗಾಯಗೊಂಡಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗುತ್ತಿದ್ದಂತೆ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಮತ್ತೆ ಕರ್ಫ್ಯೂ ವಿಧಿಸಲಾಗಿದೆ. ಇದೇ ವೇಳೆ, ತೌಬಲ್ ಜಿಲ್ಲೆಯ ಖೋಂಗ್ಜಾಮ್‌ನಲ್ಲಿರುವ ಬಿಜೆಪಿ ಕಚೇರಿಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ರಿಕ್ತ ಗುಂಪು ಪೊಲೀಸರ ವಾಹನವನ್ನು ಸುಟ್ಟುಹಾಕಿದೆ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಅವರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದೆ. ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಸಿದುಕೊಂಡಿರುವ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಮತ್ತು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಮಧ್ಯೆ, ಮಕ್ಕಳ ವಿರುದ್ಧ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ ಮತ್ತು ರಬ್ಬರ್ ಬುಲೆಟ್‌ಗಳನ್ನು ಏಕಾಏಕಿ ಬಳಸದಂತೆ ಮಣಿಪುರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಭದ್ರತಾ ಪಡೆಗಳಿಗೆ ಸೂಚಿಸಿದೆ.
ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಈವರೆಗೂ 180ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.