ಗೃಹ ಲಕ್ಷ್ಮಿ ಯೋಜನೆಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಲ್ಲ - ರಾಜ್ಯ ಸರ್ಕಾರ ; ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ?
ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ (Gruha Lakshmi scheme) ಆಧಾರ್ (Aadhaar) ಜೋಡಣೆ ಕಡ್ಡಾಯವಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ಕುಟುಂಬದ ಯಜಮಾನಿಯು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡದಿದ್ದರೂ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನು ಸಲ್ಲಿಸುವುದನ್ನು ಅನುಮತಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಬರುವ ಸುಮಾರು 22 ಲಕ್ಷ ಮಹಿಳೆಯರ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವುದು ಗೊತ್ತಾಗಿದೆ. ಇದರ ಅನುಸಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆದು ಆಧಾರ್ ಜೋಡಣೆ ಆಗದ ಯಜಮಾನಿಯ ಖಾತೆಗೂ ಹಣ ವರ್ಗಾವಣೆ ಮಾಡುವುದಾಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.
ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 16 ರಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.ಮೂಲಗಳ ಪ್ರಕಾರ, ಸುಮಾರು 22 ಲಕ್ಷ ಸಂಭಾವ್ಯ ಫಲಾನುಭವಿಗಳು ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಅನ್ನು ಜೋಡಣೆ ಮಾಡಿಲ್ಲ ಎನ್ನಲಾಗಿದೆ. ಈ ವಿಚಾರವಾಗಿ ಕಳವಳದ ವ್ಯಕ್ತವಾದ ನಂತರ ಸಂಪುಟ ಸಭೆಯಲ್ಲಿ ಆಧಾರ್ ಜೋಡಣೆ ಕಡ್ಡಾಯವಲ್ಲ ಎಂಬ ನಿರ್ಧಾರ ಕೈಗೊಳ್ಳಲಾಗಿದೆ.ಬಿಪಿಎಲ್ ಕುಟುಂಬಗಳಿಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದಕ್ಕಾಗಿ ಕೋಡ್ ಆಫ್ ಸಿವಿಲ್ ಪ್ರೊಸೀಜರ್ಗೆ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಜುಲೈ 19ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಮಲ್ಲಿಕಾರ್ಜುನ ಖರ್ಗೆ ಭಾಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 19ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಜುಲೈ 19 ರಂದು ಸಂಜೆ 6.30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾಲ್ಗೊಳ್ಳಲಿದ್ದಾರೆ.ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಬಿಜೆಪಿಯನ್ನು ಮಣಿಸಲು ವಿವಿಧ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜುಲೈ 19ರಂದು ಬೆಂಗಳೂರಿನಲ್ಲಿ ರಾಜ್ಯದ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲೇ ಎಲ್ಲ ಸಚಿವರಿಗೂ ರಾಹುಲ್ ಗಾಂಧಿ ಸಲಹೆ ಸೂಚನೆ ನೀಡಲಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಚಿವರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.