ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರೆಂಟ್..!
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಹಾಗಾಗಿ ಸಚಿವ ರಾಮಲಿಂಗಾ ರೆಡ್ಡಿಯ ಅವರು ಇದೀಗ ಒಂದೂ ವಿಚಾರಣೆಗೆ ಹಾಜರಾಗಲೇಬೇಕು. ಇಲ್ಲವೇ ವಿಶೇಷ ಕೋರ್ಟ್ ಆದೇಶಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದುಕೊಳ್ಳಲೇಬೇಕಾದ ಸ್ಥಿತಿ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯ ಈ ವಾರೆಂಟ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣ ಕುರಿತಂತೆ ಈವರೆಗೂ ಹಲವು ಬಾರಿ ಸಮನ್ಸ್ ಜಾರಿಯಾಗಿದ್ದರೂ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ನ್ಯಾಯಾಲಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲು ಆದೇಶ ನೀಡಿದೆ. ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿಕೆ ಮಾಡಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಾದಯಾತ್ರೆ ಹಾಗೂ ಆನಂತರ ಪ್ರತಿಭಟನೆ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ. ಕೆ. ಶಿವಕುಮಾರ್ , ರಾಮಲಿಂಗಾ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಮುಖಂಡರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಆರೋಪದಲ್ಲಿ ವಿಪ್ಪತ್ತು ನಿರ್ವಹಣಾ ಕಾಯಿದೆಯಡಿ ಬೆಂಗಳೂರು ನಗರದ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.
ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ರಾಮಲಿಂಗಾ ರೆಡ್ಡಿ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಸಂಬಂಧ ಸಮನ್ಸ್ ಜಾರಿಯಾಗಿದ್ದರೂ ರಾಮಲಿಂಗಾ ರೆಡ್ಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಆದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.