ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ

ದೆಹಲಿ: ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪವನ್ನು ಮಾಡಿ ಈತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ಅನೇಕ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರವು ತಮ್ಮ ಆತನ ವಿರುದ್ದ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮತ್ತು ತಮಗೆ ನ್ಯಾಯ ದೊರಕಿಸದ ಕಾರಣದಿಂದ ಬೇಸತ್ತಿದ್ದು ತಮಗೆ ಬಂದಿರುವ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಗೆ ಎಸೆಯವುದಾಗಿ ಹೇಳಿದ್ದಾರೆ. ಅಲ್ಲದೇ, ಇಂಡಿಯಾ ಗೇಟ್ನಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ನೂತನ ಸಂಸತ್ ಭವನದತ್ತ ತೆರಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ಬಿಡುಗಡೆ ಮಾಡಿದ್ದರು.
ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಕುಸ್ತಿಪಟುಗಳು, ಡಬ್ಲ್ಯುಎಫ್ಐ ಅಧ್ಯಕ್ಷನ ವಿರುದ್ಧ ಆರೋಪಿಸಿದ್ದರು.