ಮಾರ್ಚ್ ಮೊದಲ ವಾರ ರಾಜ್ಯದಲ್ಲಿ ಹಲವೆಡೆ ಮಳೆ ಮುನ್ಸೂಚನೆ; ಹವಾಮಾನ ಇಲಾಖೆ
ಬೆಂಗಳೂರು, ಫೆಬ್ರವರಿ, 25: ಇದೀಗ ಚಳಿಗಾಲದ ನಡುವೆಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲಿನ ವಾತಾವರಣ ಮುಂದುವರೆಯುತ್ತಿದೆ. ಈಗಲೇ ತಾಪಮಾನದ ಪ್ರಮಾಣ ಹೀಗೆ ಏರಿಕೆಯಾದರೆ ಬೇಸಿಗೆಯಲ್ಲಿ ಇನ್ನೆಷ್ಟು ಏರಿಕೆಯಾಗಲಿದೆ ಎಂದು ಜನರನ್ನು ಚಿಂತಗೀಡು ಮಾಡಿದೆ. ಆದರೆ ಮಾರ್ಚ್ ಮೊದಲನೇ ವಾರದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆರಾಯ ಭೂಮಿ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್ ಆರಂಭದಲ್ಲಿ ಮಳೆ ಆರಂಭವಾಗಿ, ತಾಪಮಾನ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ಕೊಡಗ ಸೇರಿದಂತೆ ಹಲವೆಡೆ ಇಂದು ಸಂಜೆ ವೇಳೆಗೆ (ಫೆಬ್ರವರಿ 25) ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಯಾವುದೇ ಇಳಿಕೆ ಕಾಣುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದೆಲ್ಲೆಡೆ ಗರಿಷ್ಠ ತಾಪಮಾನ ಪ್ರಮಾಣದಲ್ಲಿ ಭಾರಿ ಏರಿಕೆ ಆಗುತ್ತಲೇ ಇದೆ. ಈ ನಡುವೆಯೇ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ದ.ಕನ್ನಡ, ಉ.ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರ ಮಳೆ ಬೀಳುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಉತ್ತರ ಒಣನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ. ಎಚ್ಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.