5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಬಗೆಹರಿಯದ ಗೊಂದಲ ; ತೀರ್ಪು ಕಾಯ್ದಿರಿಸಿದ ಹೈ ಕೋರ್ಟ್.!
5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.
ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಏಕಸದಸ್ಯ ಪೀಠ ರದ್ದುಪಡಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರಿದ್ದ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೇ, ಮುಂದಿನ ಕೆಲ ದಿನಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ”ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. ಅಲ್ಲದೇ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರದ ಗೊಂದಲಗಳಿಗೆ ಕಾರಣವಾಗುತ್ತಿದೆ” ಎಂದರು.
”ಜೊತೆಗೆ ರಾಜ್ಯ ಶಿಕ್ಷಣ ಇಲಾಖೆಗೆ ಆರ್ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಶಿಕ್ಷಣ ಇಲಾಖೆ ಸಮವರ್ತಿ ಪಟ್ಟಿಗೆ ಸೇರಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ ಎಂದಿತ್ತು” ಎಂದು ತಿಳಿಸಿದರು.
ಅರ್ಜಿದಾರರ ಪರ ವಕೀಲರು (ಮೇಲ್ಮನವಿಯಲ್ಲಿ ಪ್ರತಿವಾದಿಗಳು), ”ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಈ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಾನೂನುಬಾಹಿರ” ಎಂದು ವಿವರಿಸಿದ್ದರು. ವಾದ – ಪ್ರತಿವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿದೆ.
ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್ಗಳ ಉಲ್ಲಂಘನೆಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಅರ್ಜಿದಾರರು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್, ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶವನ್ನು ನೀಡುವಂತೆ ಸೂಚನೆ ನೀಡಿತ್ತು.