ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ; ಮುಖ್ಯಮಂತ್ರಿ ಸಿದ್ದರಾಯ್ಯ ರಾಜೀನಾಮೆ ನೀಡಲೇಬೇಕು - ವಿಜಯೇಂದ್ರ
ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿನ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಅವಧಿಯ ಹಗರಣಗಳನ್ನು ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸಂಡೂರಿನಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಬಳ್ಳಾರಿ ಜಿಲ್ಲಾ ಕಾರ್ಯಕರಿಣಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮತ್ತು ವೇದಿಕೆ ಮೇಲೆ ಇರುವ ನಾಯಕರ ಮಧ್ಯೆ ಬಿಜೆಪಿಯಲ್ಲಿ ವ್ಯತ್ಯಾಸವಿಲ್ಲ ಎಂದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ, ಕಾರ್ಯಕರ್ತರೆಲ್ಲರೂ ಒಮ್ಮನಸಿನಿಂದ ದುಡಿಯಬೇಕು. ಮೋದಿಯೇ ಅಭ್ಯರ್ಥಿಯೆಂದು ಭಾವಿಸಿ ದುಡಿಯಬೇಕು ಎಂದು ಮನವಿ ಮಾಡಿದರು. ಜತೆಗೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಸಲಹೆ ನೀಡಿದರು.
ವಾಲ್ಮೀಕಿ ನಿಗಮದ ಹಗರಣ ಕುರಿತು ಎರಡು ತಿಂಗಳಿಂದ ಹೊರಾಟ ನಡೆಯುತ್ತಿದೆ. ಆದರೆ ಅಹಿಂದ ಹೆಸರು ಹೇಳಿಕೊಂಡು ಸಿಎಂ ಆಗಿರುವ ಸಿದ್ದರಾಮಯ್ಯ ನಿನ್ನೆ ರಣಕಹಳೆ ಊದಿದ್ದಾರೆ. ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ. ಲೂಟಿ ಹೊಡೆದ ದುಡ್ಡು ತೆಲಂಗಾಣ ಚುನಾವಣೆಗಷ್ಟೇ ಅಲ್ಲದೆ ಬಳ್ಳಾರಿ ಲೋಕಸಭೆ ಚುನಾವಣೆ ಬಳಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಗೆ ಸವಾಲು ಹಾಕುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಡೆಂಗ್ಯು ಪ್ರಕರಣ ಹೆಚ್ಚಾಗಿದೆ. ಆರೋಗ್ಯ ಸಚಿವ ಎಸಿ ಕೊಠಡಿಯಲ್ಲಿ ಕುಳಿತು ಡೆಂಗ್ಯು ಪ್ರಕರಣ ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆ. ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಬೆಳೆ ನಾಶವಾಗಿದೆ. ಪರಿಶಿಷ್ಟ ಜಾತಿ/ ಪಂಗಡಗಳ ನಿಧಿಯ 26 ಸಾವಿರ ಕೋಟಿ ಹಣ ಗ್ಯಾರೆಂಟಿಗೆ ವರ್ಗಾವಣೆಯಾಗಿದೆ. ಆ ಜನರಿಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ಸಿದ್ದರಾಮಯ್ಯ ನೈತಿಕತೆ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಹಣ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಬರದು‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹಗರಣ ಆಗಿಲ್ಲ ಅಂದರೆ ಮಂತ್ರಿಗಳ ಕೈಯಿಂದ ರಾಜೀನಾಮೆ ಯಾಕೆ ಕೊಡಿಸಿದ್ದು? ಹಗರಣವನ್ನು ಸರಕಾರ ಮಾಡಿಲ್ಲ, ಅಧಿಕಾರಿಗಳು ಮಾಡಿದ್ದಾರೆ. ಸರಕಾರಕ್ಕೂ ಇದಕ್ಕೂ ಸಂಬಂಧವಿಲ್ಲವೆಂದು ಸಿಎಂ ಹೇಳುತ್ತಿದ್ದಾರೆ. ಅಧಿಕಾರಿಗಳು ಹಗರಣ ಮಾಡಿದರೆ ಇದಕ್ಕೆ ಹಣಕಾಸು ಜವಾಬ್ದಾರಿ ಹೊತ್ತ ಸಿದ್ದರಾಮಯ್ಯ ಮತ್ತು ಆಯಾ ಇಲಾಖೆಯ ಮಂತ್ರಿ ಕುಮ್ಮಕ್ಕು ಇದಕ್ಕೆ ಇದ್ದೇ ಇರುತ್ತದೆ ಎಂದು ಆರೋಪಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ’: ಆರ್ ಅಶೋಕ್
ಬೆಂಗಳೂರು: ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಅದಕ್ಕೆ ಕ್ಲೀನ್ಚಿಟ್ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ.
ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.
ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.